ಚಿಕ್ಕೋಡಿ: ಭಾನುವಾರ ತಡರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಯಕ್ಸಂಬಾ ಪಟ್ಟಣದ ನಿವಾಸಿ ಮಹೇಶ ಕುರ್ಣಿ (48) ಕೊಲೆಯಾದವನು.
ಯಕ್ಸಂಬಾ ಪಟ್ಟಣದ ಬೀರೇಶ್ವರ ಕಾಲೋನಿಯಲ್ಲಿ ಈ ಕೃತ್ಯ ನಡೆದಿದೆ. ಮುಂಜಾನೆ ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.